ನಾದಲೀಲೆ
೧
ಕೋಲುಸಖೀ, ಚಂದ್ರಮುಖೀ, ಕೋಲೆ ನಾದಲೀಲೆ IIಪII
ಮುಂಜಾವದ ಎಲರ ಮೂಸಿ ನೋಡುತಿಹವೆ ನಲ್ಲೆ
ತರಳ ಎರಳೆ, ಚಿಗುರ ಚಿಗುರೆ, ಹೂವು ಹೂವು ಹುಲ್ಲೆ
ಕಂಗೊಳಿಸುವ ಕೆಂಪು ಮುಂದೆ, ಕಂಗೆಡಿಸುವ ಮಂಜು ಹಿಂದೆ
ಅತ್ತಣಿಂದ ಬೇಟೆಗಾರ ಬರುವ ನಾನು ಬಲ್ಲೆ
ಮುಂಜಾವದ ಎಲರ ಮೂಸಿ ನೋಡುತಿಹವೆ ನಲ್ಲೆ
ಕೋಲುಸಖೀ....
೨
ಬೀರುತಿರುವ ಪ್ರಾಣವಾಯು ಹೀರುತಿಹವೆ ನೀರೆ
ಕರೆವ ಕರುವು, ಕುಣಿವ ಮಣಕ, ತೊರೆವ ಗೋಗಭೀರೆ,
ಕಂಗೊಳಿಸುವ ಕೆಂಪು ಮುಂದೆ, ಕಂಗೆಡಿಸುವ ಮಂಜು ಹಿಂದೆ
ಕಾಣೆ ಕೊಳಲಿನವನ ಎನುವೆ, ಎಲ್ಲು ಇಹನು ಬಾರೆ
ಬೀರುತಿರುವ ಪ್ರಾಣವಾಯು ಹೀರುತಿಹವೆ ನೀರೆ
ಕೋಲುಸಖೀ....
೩
ಬೆಳ್ಳಿಚುಕ್ಕೆ ಚಿಕ್ಕೆಯಾಗಿ ಮುಳುಗಿತಲ್ಲೆ; ಬಾಲೆ
ಮುಕುಲ, ಅಲರು, ಮಲರು, ಪಸರ ಕಂಡು ಕಣ್ಣು ಸೋಲೆ
ಕಂಗೊಳಿಸುವ ಕೆಂಪು ಮುಂದೆ, ಕಂಗೆಡಿಸುವ ಮಂಜು ಹಿಂದೆ
ಕಾದಲನೆಡೆ ಬೇಡ, ಬಹಳು, ಕಾದಲೆ ಹೂಮಾಲೆ!
ಬೆಳ್ಳಿಚುಕ್ಕೆ ಚಿಕ್ಕೆಯಾಗಿ ಮುಳುಗಿತಲ್ಲೆ ಬಾಲೆ
ಕೋಲುಸಖೀ....
೪
ಬೇಟೆಯಲ್ಲ; ಆಟವೆಲ್ಲ; ಬೇಟದ ಬಗೆ, ನಾರಿ.
ಮುಗಿಲ ಬಾಯ ಗಾಳಿಕೊಳಲ ಬೆಳಕಹಡ ಬೀರಿ
(ಕಂಗೊಳಿಸುವ ಕೆಂಪು ಇರಲಿ, ಕಂಗೆಡಿಸುವ ಮಂಜು ಬರಲಿ)
ಕಳೆಯಲಿಲ್ಲೆ ಕತ್ತಲಂಥ ಕತ್ತಲವೇ ಜಾರಿ?
ಬೇಟೆಯಲ್ಲ; ಆಟವೆಲ್ಲ; ಬೇಟದ ಬಗೆನಾರಿ
ಕೋಲುಸಖೀ....
- ದ.ರಾ. ಬೇಂದ್ರೆ
' ನಾದಲೀಲೆ'
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ